Tuesday, 3 July 2012

ಅವರ ಕೈಯಲ್ಲಿ ವಿಷ ಕೊಟ್ಟವರು ಯಾರು?

ಪ್ರೀತಿ, ಪ್ರೇಮಗಳ ಕಾರಣದಿಂದಾಗಿ ಈ ದೇಶದಲ್ಲಿ ಆಗುತ್ತಿರುವ ಆತ್ಮಹತ್ಯೆ, ಹತ್ಯೆ, ಜಗಳಗಳ ಸಂಖ್ಯೆ ಕಡಿಮೆಯೇನೂ ಇಲ್ಲ. ಪ್ರತಿದಿನ ಪತ್ರಿಕೆಗಳು ಇಂಥದ್ದೊಂದು ಸುದ್ದಿಯನ್ನು ಹೊತ್ತುಕೊಂಡೇ ಬರುತ್ತವೆ. ಅವು ಇವತ್ತು ಎಷ್ಟು ಮಾಮೂಲಿ ಆಗಿಬಿಟ್ಟಿವೆ ಎಂದರೆ, ಹೆಚ್ಚಿನ ಬಾರಿ ಅವು ಓದುಗರ ಗಮನವನ್ನೇ ಸೆಳೆಯುತ್ತಿಲ್ಲ. ಓಡಿ ಹೋದ ಅಥವಾ ಆತ್ಮಹತ್ಯೆ ಮಾಡಿಕೊಂಡ ಯುವಜೋಡಿಯನ್ನು ಅಪರಾಧಿ ಸ್ಥಾನದಲ್ಲಿ ಕೂರಿಸಿ, ಅವರ ನಿರ್ಧಾರಕ್ಕೆ ನಾಲ್ಕು ಬೈಗುಳವನ್ನು ಸುರಿಸಿ  ನಾವೆಲ್ಲ ಸುಮ್ಮನಾಗುತ್ತೇವೆ. ನಿಜವಾಗಿ ಪರಸ್ಪರ ಪ್ರೀತಿಸುವ ಯುವ ಜೋಡಿಯೊಂದು ಅನಾಹುತಕಾರಿ ನಿರ್ಧಾರವನ್ನು ಕೈಗೊಳ್ಳುವುದರಲ್ಲಿ ಆ ಜೋಡಿಯ ಪಾತ್ರ ಮಾತ್ರ ಇರುವುದಲ್ಲ. ಅವರಿಗಿಂತ ದೊಡ್ಡ ಪಾತ್ರವನ್ನು ಈ ಸಮಾಜ ನಿರ್ವಹಿಸಿರುತ್ತದೆ. ದುರಂತ ಏನೆಂದರೆ, ಮನರಂಜನೆ, ಸಮಾನತೆ, ಸ್ವಾತಂತ್ರ್ಯ, ಆಧುನಿಕತೆ, ಸೆಕ್ಯುಲರಿಸಮ್ ಮುಂತಾದ ಆಕರ್ಷಕ ಪರಿಕಲ್ಪನೆಗಳ ಮೂಲಕ ಸಮಾಜ ತನ್ನ ಆ ಖಳ ಪಾತ್ರವನ್ನು ಸಮರ್ಥಿಸಿಕೊಳ್ಳುತ್ತಿದೆ.
          ಬಿಹಾರದ ಪಟ್ನಾದಲ್ಲಿ ಯುವತಿಯೊಬ್ಬಳು ತನ್ನ ತಂದೆ ಮತ್ತು ತಮ್ಮನಿಗೆ ವಿಷವುಣಿಸಿ ಜೂನ್ 30ರಂದು ಕೊಲೆ ಮಾಡಿದ್ದಾಳೆ. ಆಕೆಯ ಪ್ರೇಮ ಪ್ರಕರಣಕ್ಕೆ ತಂದೆ ಮತ್ತು ತಮ್ಮ ಅಡ್ಡಿಯಾಗಿರುವುದೇ ಇದಕ್ಕೆ  ಕಾರಣ. ಸದ್ಯ ಪೊಲೀಸರು ಆ ಯುವತಿಯನ್ನು ಬಂಧಿಸಿ ಕೊಲೆ ಕೇಸು ದಾಖಲಿಸಿದ್ದಾರೆ. ಒಂದು ರೀತಿಯಲ್ಲಿ ತಂದೆಯನ್ನು ಕೊಂದ, ತಮ್ಮನನ್ನು ಹತ್ಯೆ ಮಾಡಿದ ಭೀಕರ ಅಪರಾಧದೊಂದಿಗೆ ಯುವತಿಯೋರ್ವಳ ಬದುಕು ಆರಂಭವಾಗಿದೆ. ಆದರೆ ಇಂಥದ್ದೊಂದು ಬದುಕನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಆ ಯುವತಿಗೆ ಪ್ರೇರಣೆಯಾದದ್ದಾದರೂ ಏನು? ಆ ವರೆಗೆ ಸಾಕಿ ಸಲಹಿದ ಅಪ್ಪನನ್ನೇ ಕೊಲ್ಲುವಷ್ಟು, ತಮ್ಮನಿಗೇ ವಿಷ ಕೊಡುವಷ್ಟು ಆಕೆಯ ಹೃದಯವನ್ನು ಕಟುವಾಗಿಸಿದ್ದಾದರೂ ಯಾವುದು? ಆಕೆ ಈ ಮೊದಲು ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯೂ ಆಗಿರಲಿಲ್ಲ. ಪ್ರಿಯಕರನ ಮಾತು ಕೇಳಿ ತಂದೆಯನ್ನೇ ಕೊಂದಳು ಅನ್ನುವ ಒಂದು ವಾಕ್ಯದಲ್ಲಿ ಮುಕ್ತಾಯಗೊಳಿಸುವುದಕ್ಕೆ ಇಂಥ ಪ್ರಕರಣಗಳು ಅರ್ಹವೇ?
        ಯುವಕ ಮತ್ತು ಯುವತಿಯ ಮಧ್ಯೆ ಪ್ರೇಮಾಂಕುರವಾಗುವುದಕ್ಕೆ ಕಾರಣ ಅವರಿಬ್ಬರು ಮಾತ್ರ ಖಂಡಿತ ಅಲ್ಲ. ಅಂಥದ್ದೊಂದು ವಾತಾವರಣವನ್ನು ಹಿರಿಯರಾದ ನಾವೆಲ್ಲ ನಿರ್ಮಿಸಿ ಕೊಟ್ಟಿದ್ದೇವೆ. ನಮ್ಮ ಸಿನಿಮಾಗಳು ತಯಾರಾಗುವುದೇ ಪ್ರೀತಿ, ಪ್ರೇಮಗಳ ಸುತ್ತ. ತನ್ನ ಪ್ರೇಮವನ್ನು ಗೆಲ್ಲುವುದಕ್ಕಾಗಿ ಹೀರೋ ಯಾರ ಹತ್ಯೆ ಮಾಡುವುದಕ್ಕೂ ಹೇಸುವುದಿಲ್ಲ. ಈ ಪ್ರೇಮ ವ್ಯವಹಾರಕ್ಕೆ ಹಿರೋಯಿನ್ ಳ  ತಂದೆ ವಿರುದ್ಧ ಎಂದಾದರೆ ಆತನನ್ನು ಖಳನಂತೆ ಬಿಂಬಿಸಲಾಗುತ್ತದೆಯೇ ಹೊರತು ಆ ಅಪ್ಪನ ಅಪ್ಪಣೆ ಇಲ್ಲದೇ ಪ್ರೀತಿಸಿದ ಈ ಹೀರೋ ಹಿರೋಯಿನ್ ಗಳನ್ನಲ್ಲ. ಆ ಅಪ್ಪನಿಗೆ ಹೀರೋನಿಂದ ಬೀಳುವ ಪ್ರತಿ ಹೊಡೆತಕ್ಕೂ ಸಿನಿಮಾ ಮಂದಿರಗಳಲ್ಲಿ ಶಿಳ್ಳೆ ಬೀಳುತ್ತದೆ. ಹೀರೋ ಎಲ್ಲರನ್ನೂ ಚೆಂಡಾಡುವುದು, ಅಂತಿಮವಾಗಿ ಅಪ್ಪ ಆ ಪ್ರೀತಿಗೆ ಹಸಿರು ನಿಶಾನೆ ತೋರುವುದು ಅಥವಾ ಹೀರೋ - ಹಿರೋಯಿನ್ ಊರು ಬಿಟ್ಟು ಹೋಗುವುದು, ಸಾಯುವುದು.. ಹೀಗೆ ಸಾಗುತ್ತವೆ ಹೆಚ್ಚಿನ ಸಿನಿಮಾಗಳು. ಇನ್ನು, ಟಿವಿಗಳಲ್ಲಿ ಪ್ರಸಾರವಾಗುವ ಧಾರಾವಾಹಿಗಳ ಸ್ಥಿತಿಯೂ ಭಿನ್ನವಲ್ಲ. ರಿಯಾಲಿಟಿ ಶೋಗಳ ಪಾಡಂತೂ ಇದಕ್ಕಿಂತಲೂ ಕರಾಳ. ಪ್ರೇಮ ಕತೆಯಿಲ್ಲದ ಒಂದೇ ಒಂದು ಧಾರಾವಾಹಿ ಈ ದೇಶದಲ್ಲಿ ಪ್ರಸಾರವಾಗಿರುವ ಸಾಧ್ಯತೆ ಇಲ್ಲ. ಹಾಗಂತ ಇವುಗಳನ್ನು ನಿರ್ಮಿಸುವುದು ಹದಿಹರೆಯದ ಯುವಕ ಯುವತಿಯರು ಅಲ್ಲವಲ್ಲ. ಹೀಗಿರುವಾಗ ಅವರು ಕೈಗೊಳ್ಳುವ ತಪ್ಪು ನಿರ್ಧಾರಕ್ಕೆ ಅವರೊಬ್ಬರನ್ನೇ ದೂಷಿಸುವುದು ಎಷ್ಟು ಸರಿ? ತಮಾಷೆ ಏನೆಂದರೆ, ಇಂಥ ಸಿನಿಮಾಗಳನ್ನು ತಯಾರಿಸಿ ಸಮಾಜಕ್ಕೆ ಅರ್ಪಿಸುವವರಿಗೆ ರಾಷ್ಟ್ರ ಪ್ರಶಸ್ತಿ ಸಿಗುತ್ತದೆ. ಅತ್ಯುತ್ತಮ ಚಿತ್ರಕತೆ ಎಂದು ಕೊಂಡಾಡಲಾಗುತ್ತದೆ. ಸಮಾಜವನ್ನು ತಪ್ಪು ದಾರಿಗೆಳೆಯುವ ಪಾತ್ರವನ್ನು ನಿರ್ವಹಿಸಿದ್ದಕ್ಕಾಗಿ ಅತ್ಯುತ್ತಮ ನಟ, ನಟಿ, ನಿರ್ದೇಶಕ ಪ್ರಶಸ್ತಿಗಳೂ ಒಲಿಯುತ್ತವೆ. ಒಂದು ಕಡೆ, ಸಿನಿಮಾದ ಪಾತ್ರವನ್ನೇ ನಿಜ ಜೀವನದಲ್ಲಿ ನಿರ್ವಹಿಸಿದ್ದಕ್ಕಾಗಿ ಸರಕಾರ ಕೇಸು ದಾಖಲಿಸುವಾಗ, ಇನ್ನೊಂದು ಕಡೆ ಅದೇ ಸರಕಾರ ಅಂಥ ಸಿನಿಮಾವನ್ನು ನಿರ್ಮಿಸಿದ್ದಕ್ಕಾಗಿ ಬಹುಮಾನ ಕೊಟ್ಟು ಪುರಸ್ಕರಿಸುತ್ತದೆ. ಯಾಕಿಂಥ ದ್ವಂದ್ವಗಳು?
    ಕೇವಲ ಸಿನಿಮಾಗಳು, ಧಾರಾವಾಹಿಗಳು ಎಂದಲ್ಲ, ನಮ್ಮ ಒಟ್ಟು ಬದುಕುವ ವಿಧಾನವೇ ಆಧುನಿಕತೆಯ ಕೈಯಲ್ಲಿ ಹೈಜಾಕ್ ಆಗಿಬಿಟ್ಟಿದೆ. ಶಾಲೆ, ಕಾಲೇಜು, ಮಾರುಕಟ್ಟೆ, ಮದುವೆ, ಕ್ರೀಡೆ.. ಎಲ್ಲದರಲ್ಲೂ ಅತಿ ಅನ್ನುವಷ್ಟು ಮುಕ್ತತೆ ಇದೆ. ಹೆಣ್ಣು-ಗಂಡು ನಡುವಿನ ಸಹಜ ಅಂತರವು ಕಡಿಮೆಯಾಗುತ್ತಾ ಬರುತ್ತಿದೆ. ಹೀಗಿರುವಾಗ ಪರಸ್ಪರ ಆಕರ್ಷಣೆಗೆ ಒಳಗಾಗುವ ಹೆಣ್ಣು ಮತ್ತು ಗಂಡನ್ನಷ್ಟೇ ಅಪರಾಧಿಯಾಗಿ ಬಿಂಬಿಸುವುದಕ್ಕೆ ಯಾವ ಅರ್ಥವೂ ಇಲ್ಲ. ಅದು ಆ ಮಟ್ಟಕ್ಕೆ ಬೆಳೆಯುವುದರಲ್ಲಿ ನಮ್ಮೆಲ್ಲರ ಪಾತ್ರ ಇದೆ. ಈ ಸತ್ಯವನ್ನು ಒಪ್ಪಿಕೊಳ್ಳದ ಹೊರತು ಬರೇ ಕೇಸು ಜಡಿಯುವುದರಿಂದಲೋ ಶಾಪ ಹಾಕುವುದರಿಂದಲೋ ಸಮಸ್ಯೆಗೆ ಪರಿಹಾರ ಸಿಗಲಾರದು. ಹದಿಹರೆಯ ಎಂಬುದು ಕುತೂಹಲದ ವಯಸ್ಸು. ಈ ಕುತೂಹಲವನ್ನು ನೈತಿಕ ಪಾಠಗಳ ಮೂಲಕ ತಣಿಸುವ, ಅದಕ್ಕೆ ಪೂರಕವಾದ ವಾತಾವರಣವನ್ನು ಬೆಳೆಸುವ ಜವಾಬ್ದಾರಿ ಎಲ್ಲ ವಯಸ್ಕರ ಮೇಲಿದೆ. ಅವರ ಆಲೋಚನೆಗಳನ್ನು ಸಮಾಜಮುಖಿಗೊಳಿಸಬೇಕು. ಅದಕ್ಕೆ ಯೋಗ್ಯವಾದ ತಾಣಗಳಾಗಿ ಶಾಲೆ, ಕಾಲೇಜುಗಳನ್ನು ಮಾರ್ಪಡಿಸಬೇಕು. ಯುವ ಸಮೂಹದ ಮನಸ್ಸನ್ನು ಪ್ರಚೋದಿಸುವ ಯಾವುದೂ ಸಿನಿಮಾ, ಧಾರಾವಾಹಿಗಳ ಹೆಸರಲ್ಲಿ ಬಿಡುಗಡೆಗೊಳ್ಳದಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ಹದಿಹರೆಯದ ಮಕ್ಕಳ ಮನಸ್ಸನ್ನು ಅರಿಯುವ ಪ್ರಯತ್ನವನ್ನು  ಮನೆಯ ಹಿರಿಯರು ಮಾಡಬೇಕು. ಅವರು ತಮ್ಮ ಎಲ್ಲವನ್ನೂ ತಾಯಿಯಲ್ಲೋ ತಂದೆಯಲ್ಲೋ ಅಥವಾ ಹಿರಿಯರಲ್ಲೋ ಹಂಚಿಕೊಳ್ಳುವಂತಹ ವಾತಾವರಣವನ್ನು ಮನೆಯಲ್ಲಿ ಬೆಳೆಸಬೇಕು. ಆಗಾಗ ಹಿತ ವಚನಗಳನ್ನು ಹೇಳುತ್ತಾ, ಧಾರ್ಮಿಕ ಮೌಲ್ಯಗಳನ್ನು ನೆನಪಿಸುತ್ತಾ ತಿದ್ದುವ ಪ್ರಯತ್ನ ಮಾಡುತ್ತಲಿರಬೇಕು. ನಾವು ನಿಮ್ಮ ಹಿತಾಕಾಂಕ್ಷಿಗಳು ಅನ್ನುವ ಸೂಚನೆಯೊಂದು ಪ್ರತಿ ಸಂದರ್ಭದಲ್ಲೂ ಹೆತ್ತವರಿಂದ ದಾಟುತ್ತಲಿರಬೇಕು..
ಏನೇ ಆಗಲಿ, ಯುವ ಸಮೂಹಕ್ಕೆ ಮನರಂಜನೆಯ ಹೆಸರಲ್ಲಿ ಹಿರಿಯರಾದ ನಾವು ಕೊಡುತ್ತಿರುವುದು ವಿಷವನ್ನೇ. ಆ ವಿಷದ ಪ್ರಭಾವಕ್ಕೆ ಮಕ್ಕಳು ಒಳಗಾದರೆ ಅದಕ್ಕಾಗಿ ಕೇಸು ಜಡಿಯಬೇಕಾದುದು ಅವರ ಮೇಲಷ್ಟೇ ಅಲ್ಲ, ಅದನ್ನು ಕೊಟ್ಟವರ ಮೇಲೂ ಕೇಸು ಹಾಕಬೇಕು. ಆಗ ಮಾತ್ರ ವಿಷ ತಯಾರಿಸುವವರು ಎಚ್ಚೆತ್ತುಕೊಳ್ಳುತ್ತಾರೆ..

No comments:

Post a Comment